ಕರಾವಳಿ ಪ್ರಭ ನ್ಯೂಸ್
ಭಟ್ಕಳ : ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸಚೇತಕರು ಆದ ಸಲೀಂ ಅಹ್ಮದ್ ಅವರಿಗೆ ರಾಜ್ಯ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಸಲೀಂ ಅಹ್ಮದ್ ಅವರು ಕಳೆದ ೪೫ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆ ಅಲಂಕರಿಸಿ ಒಬ್ಬ ಹಿರಿಯ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡಿರುವ ಕ್ರಿಯಾಶೀಲ ಸಲೀಂ ಅಹ್ಮದ್ ಅವರು ರಾಜ್ಯದಲ್ಲಿ ನಡೆದ ವಿಧಾನಸಭೆ, ಲೋಕಸಭಾ ಚುನಾವಣೆ, ಈ ಹಿಂದೆ ನಡೆದ ಉಪಚುನಾವಣೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸಿ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಮತಗಳನ್ನು ಕಾಂಗ್ರೆಸ್ಗೆ ತರಲು ಸಾಕಷ್ಟು ಶ್ರಮವಹಿಸಿದ್ದಾರೆ. ಸಲೀಂ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಜೊತೆಗೆ ರಾಜ್ಯದಾದ್ಯಂತ ಓಡಾಡಿ ಪಕ್ಷ ಕಟ್ಟಲು ತನ್ನದೇ ಆದ ಕೊಡುಗೆ ನೀಡಿರುತ್ತಾರೆ. ಇವರಿಗೆ ರಾಜ್ಯ ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಿದಲ್ಲಿ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ವರ್ಗಗಳ ಜನರ ವಿಶ್ವಾಸಗಳಿಸಿ ಉತ್ತಮ ಅಭಿವೃದ್ಧಿ ಕಾರ್ಯ ಮಾಡುವುದರ ಜೊತೆಗೆ ರಾಜ್ಯದಲ್ಲಿ ಪಕ್ಷದ ಮತ್ತಷ್ಟು ಬೆಳವಣಿಗೆಗೂ ಅನುಕೂಲವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಪಕ್ಷಕ್ಕೆ ಸಲೀಂ ಅಹ್ಮದ್ ಅವರ ಹಿರಿತನ ಮತ್ತು ಸಲ್ಲಿಸಿರುವ ಸೇವೆ ಗುರುತಿಸಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಅಬ್ದುಲ್ ಮಜಿದ್ ಶೇಖ ಆಗ್ರಹಿಸಿದ್ದಾರೆ.